Text copied!
Bibles in Kannada

ಅರಣ್ಯ 14:19-45 in Kannada

Help us?

ಅರಣ್ಯ 14:19-45 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
20 ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
21 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
22 ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
23 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
24 ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
25 ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.
26 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
27 “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
28 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
29 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.
30 ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
31 ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.
32 ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
33 ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.
34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.
35 ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
36 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
38 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
39 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
40 ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
41 ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
42 ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
43 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.
45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.
ಅರಣ್ಯ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019