109 ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.
110 ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.
111 ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
112 ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.
113 ಸಾಮೆಕ್. ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
114 ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
115 ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.
117 ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
118 ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
121 ಆಯಿನ್. ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
123 ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.
124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
125 ನಾನು ನಿನ್ನ ಸೇವಕನು, ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
127 ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.