Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 35

ಕೀರ್ತ 35:14-27

Help us?
Click on verse(s) to share them!
14ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
15ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.
16ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ.
17ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.
18ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.
19ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
20ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
21ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.
22ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?
23ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.
24ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.
25ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
26ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
27ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.

Read ಕೀರ್ತ 35ಕೀರ್ತ 35
Compare ಕೀರ್ತ 35:14-27ಕೀರ್ತ 35:14-27