4ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
5ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.
6ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
7ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
8ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
9ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
10ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
11ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
12ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.