4ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
5ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.