1ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
2ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.
3ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.
4ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ.
5ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.
6ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು
7ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.
8ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,
9ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.