6ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.
7ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.
8ಬಾ ವಧುವೇ, ಎನ್ನೊಂದಿಗೆ ಲೆಬನೋನಿನಿಂದ. ಬಾ ನನ್ನೊಂದಿಗೆ, ಲೆಬನೋನಿನಿಂದ, ಇಳಿದು ಬಾ ಅಮಾನದ ತುದಿಯಿಂದ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ, ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.
9ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ; ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.
10ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
11ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
12ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.