Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 13

ಯೋಹಾ 13:1-17

Help us?
Click on verse(s) to share them!
1ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
2ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
3ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
4ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
5ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
6ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
7ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.
8ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.
9ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.
10ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
11ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
13ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
14ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

Read ಯೋಹಾ 13ಯೋಹಾ 13
Compare ಯೋಹಾ 13:1-17ಯೋಹಾ 13:1-17