Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 8

1 ಅರಸು 8:4-28

Help us?
Click on verse(s) to share them!
4ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
5ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
6ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
7ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
8ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
9ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.
10ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
11ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.
12ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.
13ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.
14ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,
15“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.
16ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.
17ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.
18ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.
19ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.
20ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.
21ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.
22ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,
23“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
24ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.
25ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
26ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.
27“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
28ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.

Read 1 ಅರಸು 81 ಅರಸು 8
Compare 1 ಅರಸು 8:4-281 ಅರಸು 8:4-28